ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನತೆ ಹೊಸ ವರ್ಷ ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ಈ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಆಗಬಾರದು ಎನ್ನುವ ಉದ್ದೇಶದಿಂದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದ್ದೇವೆ ಎಂದು ಹೇಳಿದರು.
ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯಲಿದ್ದು, ಹೆಣ್ಣು ಮಕ್ಕಳು, ಮಹಿಳೆಯರ ಭದ್ರತೆಯ ದೃಷ್ಟಿಯಿಂದ ಈ ಬಾರಿ 7500ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆದರು ಕೂಡಲೇ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.
ಈ ಮೂಲಕ ಈ ಬಾರಿ ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ.





