ಬೆಂಗಳೂರು: ಚಳಿಗಾಲದ ಸೀಸನ್‌ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಒಂದೆಡೆ ವಿಪರೀತ ಚಳಿ, ಮತ್ತೊಂದೆಡೆ ಮಳೆಯಿಂದ ರಾಜ್ಯದ ಜನತೆ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿದ್ದು, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ದಟ್ಟ ಮಂಜು ಆವರಿಸಲಿದೆ ಎಂದು ಅಂದಾಜಿಸಲಾಗಿದೆ.





