ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಆರೋಪಿಸಿದ್ದಾರೆ.
ನಗರದ ಜೆಪಿ ಭವನದಲ್ಲಿ ಇಂದು(ಏಪ್ರಿಲ್.9) ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರರು ಮುಕ್ತವಾಗಿ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ಹೇಳಿಕೆಯಿಂದಲೇ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.
ಈ ಹಿಂದೆಯೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಮೇಲೆ ಪರಿಣಾಮ ಬೀರಿದೆ. ಈ ಯೋಜನೆಗಳಿಂದ ಸರ್ಕಾರ ಅಭಿವೃದ್ಧಿ ಹಣ ನೀಡಲು ಆಗುತ್ತಿಲ್ಲ. ಹಾಗಾಗಿಯೇ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಇದನ್ನೆಲ್ಲಾ ನೋಡಿದರೆ ಕಾಂಗ್ರೆಸ್ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಹಾಗೂ ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.