ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಿನ್ನೆ ಚುನಾವಣೆಯ ಫಲಿತಾಂಶ ಬಂದಿದೆ. ಜನರ ತೀರ್ಪಿಗೆ ನಾವು ತಲೆಬಾಗಲೇಬೇಕು. ಈಗ ಅದರ ಬಗ್ಗೆ ಮಾತನಾಡಿದರೆ ಏನೂ ಪ್ರಯೋಜನವಿಲ್ಲ. ಏನೇ ಇದ್ದರೂ ಆಮೇಲೆ ಮಾತನಾಡುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಚನ್ನಪಟ್ಟಣದ ಫಲಿತಾಂಶದಿಂದ ತೀವ್ರ ಬೇಸರಗೊಂಡಿರುವ ಕುಮಾರಸ್ವಾಮಿ ಅವರು, ಯಾವುದೇ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ ನಿನ್ನೆಯಿಂದ ಪುತ್ರ ನಿಖಿಲ್ ಜೊತೆ ಜೆ.ಪಿ.ನಗರದ ತಮ್ಮ ನಿವಾಸದಲ್ಲಿಯೇ ಇದ್ದರು. ಅಲ್ಲಿ ಯಾವೊಬ್ಬ ಗಣ್ಯ ನಾಯಕರನ್ನು ಕೂಡ ಭೇಟಿ ಮಾಡದೇ ತೀವ್ರ ಬೇಸರದಲ್ಲಿದ್ದರು ಎನ್ನಲಾಗಿದೆ
ಆದರೆ ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನಕ್ಕೆ ಭಾಗಿಯಾಗಲೇಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.