ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ನಾವು ಏಕ ಪಕ್ಷಿಯಾಗಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ.ನಮ್ಮ ಮಿತ್ರ ಪಕ್ಷ ಜೆಡಿಎಸ್ ಜೊತೆ ಮಾತುಕತೆ ನಡೆಸಬೇಕು ಈವರೆಗೂ ಯಾವುದೇ ನಿರ್ಧಾರ ಆಗಿಲ್ಲ ಎಂದು ಪುನರುಚ್ಚರಿಸಿದರು.
ಅಧಿವೇಶನದಲ್ಲಿ ನಾವು ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರದ ಗಮನ ಸೆಳೆಯಲಿದ್ದೇವೆ. ಹೀಗಾಗಿ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡಿಸುತ್ತೇವೆ. ಈ ಭಾಗದ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದರು.
ಇದನ್ನು ಓದಿ : ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬೀರಪ್ಪ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 63% ಕಮೀಷನ್ ಎಂದು ಹೇಳಿಲ್ಲ. ನಾನು ಅವರ ಎಲ್ಲಾ ಹೇಳಿಕೆಯನ್ನು ಕೂಲಂಕುಶವಾಗಿ ಪರಿಶೀಲಿಸಿದ್ದೇನೆ. 2019ರ ಸರ್ಕಾರ ಎಂದೂ ಕೂಡಾ ಅವರು ಹೇಳಿಲ್ಲ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ ನೋಡಲಿ ಎಂದು ತಿರುಗೇಟು ನೀಡಿದರು.
ನನ್ನ ತಿಳುವಳಿಕೆ ಪ್ರಕಾರ ಉಪಲೋಕಾಯುಕ್ತರು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಎಂದು ಹೇಳಿಲ್ಲ. ಸಚಿವ ಎಂಬಿ ಪಾಟೀಲ್ ಮೊದಲು ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತದೆ ಎಂಬುದನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಈ ವಿಷಯದಲ್ಲಿ ಅವರು ಮೂಗು ತೂರಿಸುವ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಈ ಹಿಂದೆ ಕಾಡುಗಳ್ಳ ವೀರಪ್ಪನ್ ಇದ್ದಾಗ ಆನೆಗಳ ಸಾವಿನ ಪ್ರಮಾಣ ಕಡಿಮೆ ಇತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆನೆಗಳ ಸಾವು ಹೆಚ್ಚಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕಿಂತ ವೀರಪ್ಪನ್ ಕಾಲವೇ ಆನೆಗಳಿಗೆ ಚೆನ್ನಾಗಿತ್ತು. ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರವಧಿಯಲ್ಲಿ ಜಂಗಲ್ ರಾಜ್ ನಡೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.





