ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಹಾಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದನ್ನು ನಾನು ನಿನ್ನೆಯೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರೂ ಕೂಡ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದರು.
ಇನ್ನು ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿಲ್ಲ. ವಿಪಕ್ಷಗಳ ಟೀಕೆಗೆ ನಾನು ಉತ್ತರ ಕೊಡಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.