ಬೆಂಗಳೂರು: ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ನಾನು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ನಾನು ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಗಾಂಧಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದೆ. ನನ್ನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಎಲ್ಲಾ ಸಚಿವರ ಜೊತೆ ಮಾತನಾಡುತ್ತೇನೆ. ನನ್ನ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಂದರೂ ಸಹ ಮಾತನಾಡುತ್ತೇನೆ. ಆದರೆ ನಾನು ಕಾಂಗ್ರೆಸ್‌ನ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ. ಬಿಜೆಪಿಯವರೇ ಅಪಪ್ರಚಾರ ಮಾಡಿದ್ದಾರೆ ಅಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಬಿಜೆಪಿಗೆ ಮುಜುಗರ ಆಗುವಂತಹ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನನಗೆ ಬಂದಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ. ನನ್ನ ವಕೀಲರ ಜೊತೆ ಚರ್ಚಿಸಿ ಉತ್ತರ ಕೊಡುತ್ತೇನೆ ಎಂದು ಹೇಳಿದರು.





