ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು, ಮನರೇಗಾ ಹೆಸರು ಬದಲಾವಣೆ ಮಾಡುವ ಮೂಲಕ ಕಾಯ್ದೆ ತಿದ್ದುಪಡಿ ಮಾಡಲಾಗಿರುವುದನ್ನು ಆಕ್ಷೇಪಿಸಿದ್ದು, ಕೇಂದ್ರ ಸರ್ಕಾರ ಈ ಮೂಲಕ ಗ್ರಾಮ ಪಂಚಾಯಿತಿಗಳ ಹಕ್ಕು ಕಸಿದುಕೊಳ್ಳುತ್ತಿದೆ. ಮನರೇಗಾ ಮರು ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಸಚಿವರು, ಶಾಸಕರು, ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.





