ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯ ಮಾಡಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದೇಶದ ಎಲ್ಲಾ ರಾಜ್ಯಗಳಿಗಿಂತ ನಮ್ಮ ರಾಜ್ಯವೇ ಅತಿ ಅಧಿಕವಾಗಿ ತೆರಿಗೆ ಪಾವತಿಸುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಬಾರಿಯೂ ನಮಗೆ ಅನ್ಯಾಯ ಮಾಡುತ್ತಿದೆ. ಅಲ್ಲದೇ ನಮ್ಮ ರಾಜ್ಯದ ತೆರಿಗೆ ಹಣವನ್ನು ದೆಹಲಿ, ಉತ್ತರ ಪ್ರದೇಶ, ಹಾಗೂ ಬಿಹಾರಕ್ಕೆ ನೀಡುತ್ತಿದ್ದಾರೆ.
ನಮ್ಮ ರಾಜ್ಯದಲ್ಲಿ ಐವರು ಕೇಂದ್ರ ಸಚಿವರು ಇದ್ದಾರೆ. ಇದರಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸಹ ಒಬ್ಬರಾಗಿದ್ದಾರೆ. ಹೀಗಿದ್ದರೂ, ಆಂಧ್ರಕ್ಕಿಂತಲೂ ಕಡಿಮೆ ಮಟ್ಟದಲ್ಲಿ ನಮ್ಮ ರಾಜ್ಯ ತೆರಿಗೆ ಹಣವನ್ನು ನೀಡಿದ್ದಾರೆ. ನೆರೆ ರಾಜ್ಯಗಳಿಗಿಂತಲೂ ನಾವೂ ಕೀಳಾ? ಎಂದು ಪ್ರಶ್ನಿಸಿದರು.
ನಮ್ಮ ರಾಜ್ಯದ ಕೇಂದ್ರ ಸಚಿವರು ತೆರಿಗೆ ಹಣದಲ್ಲಿ ನ್ಯಾಯ ಕೇಳದೇ ನಮ್ಮಲ್ಲೇ ಇದ್ದುಕೊಂಡು ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.