ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣದ ವಿಚಾರಣೆಗೆ ಒಳಗಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನ ಒಂದನೇ ತ್ವರಿತಗತಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಎಸ್ ಯಡಿಯೂರಪ್ಪ ಮೇಲಿನ ಆರೋಪ ಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಾಲಯ, ಜುಲೈ. 15ಕ್ಕೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ ಆದೇಶ ಹೊರಡಿಸಿದೆ.
ಅಪ್ರಾಪ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಇನ್ನು ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.
ತನಿಖೆ ನಡೆಸಿದ್ದ ಸಿಐಡಿ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಪಟ್ಟಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಅರುಣ್, ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರ ವಿರುದ್ಧ ಒಂದನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಪಟ್ಟಿ ಸಲ್ಲಿಸಿದ್ದರು, ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಎಸ್‌ವೈ ಮತ್ತು ಸಂಗಡಿಗರಿಗೆ ಸಮನ್ಸ್ ನೀಡಿದೆ.





