ಬೆಂಗಳೂರು: ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುವುದಾಗಿ ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿದ್ಯಾರ್ಥಿ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.
ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ವಿದ್ಯಾರ್ಥಿಯ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ.
ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ.1/4#ಕನ್ನಡ #ಬೆಳಗಾವಿ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 1, 2022
ಡಿಸಿಪಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಖಂಡಿಸಿದ್ದಾರೆ.
ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಆ ಬಾಲಕನಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.