ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ, ಹಲವು ಬಾರಿ ನೋಟಿಸ್ ನೀಡಿದರೂ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೋರೆ ಹೋಗಿತ್ತು. ಬಿಎಸ್‌ವೈ ವಿರುದ್ಧ ವಾರೆಂಟ್ ಜಾರಿ ಮಾಡಿ ಬೆಂಗಳೂರು ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಪ್ರಕರಣ ರದ್ದು ಕೋರಿ ಮತ್ತು ಬಂಧನ ಮಾಡದಂತೆ ಬಿಎಸ್‌ವೈ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಿಎಸ್‌ವೈರನ್ನು ಬಂಧನ ಮಾಡದಂತೆ ಸೂಚಿಸಿತ್ತು. ಕೋರ್ಟ್ ಸೂಚನೆ ಮೇರೆಗೆ ಜೂನ್.17ರಂದು ಸಿಐಡಿ ಅಧಿಕಾರಿಗಳ ಮುಂದೆ ಬಿಎಸ್‌ವೈ ವಿಚಾರಣೆಗೆ ಹಾಜರಾಗಿದ್ದರು.