ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಡೆಸುತ್ತಿರುವ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಬೇಕು. ಅನಗತ್ಯವಾಗಿ ಗೊಂದಲ ಮೂಡಿಸಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವರಿಗೆ ಸಲಹೆ ನೀಡಿದರು.
ಸಮೀಕ್ಷೆ ಹಲವಾರು ಜಿಲ್ಲೆಗಳಲ್ಲಿ ನಾನಾ ರೀತಿಯಲ್ಲಿ ನಡೆದಿದೆ. ಕೆಲವು ಜಿಲ್ಲೆಗಳಲ್ಲಿ ಶೇ. 70ರಷ್ಟು, 50 ರಷ್ಟು, 60 ರಷ್ಟು ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಹುತೇಕ ಮುಗಿಯುವ ಹಂತದಲ್ಲಿದೆ.
ಇದನ್ನು ಓದಿ : ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ
ರಾಜ್ಯದ ಸರಾಸರಿ ಪರಿಗಣಿಸುವುದಾದರೆ ಶೇ.20 ರಿಂದ 25ರಷ್ಟು ಬಾಕಿಯಿರುವ ಸಾಧ್ಯತೆ ಇದೆ. ನಾಳೆ ಅ.7ಕ್ಕೆ ಸಮೀಕ್ಷೆ ಪೂರ್ಣಗೊಳಿಸಲು ಗಡುವು ನಿಗದಿ ಪಡಿಸಲಾಗಿದ್ದು, ಅದು ನಾಳೆಗೆ ಮುಗಿಯುತ್ತಿದೆ. ಇನ್ನೂ ನಾಲ್ಕು ದಿನ ಅವಧಿ ವಿಸ್ತರಣೆ ಮಾಡಿದರೆ, ಸಮೀಕ್ಷೆ ಬಹುತೇಕ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೊಪ್ಪಳ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಸಂಜೆ ವೇಳೆಗೆ ವಾಪಸ್ ಬರಲಿದ್ದು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಜಿಲ್ಲಾವಾರು ಮಾಹಿತಿ ಪಡೆದು ಅವಧಿ ವಿಸ್ತರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
ಪ್ರಶ್ನೆಗಳ ಸಂಖ್ಯೆ ಹೆಚ್ಚಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿರುವುದು ಕೇಂದ್ರ ಸಚಿವ ವಿ.ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರಿಬ್ಬರಷ್ಟೇ ಅಲ್ಲ, ನಮಗೂ ಕೆಲವು ವಿಚಾರಗಳ ಬಗ್ಗೆ ಅಸಮಾಧಾನಗಳಿವೆ. ಸಮೀಕ್ಷೆ ನಡೆಸುವಾಗ ಸಣ್ಣ ಪುಟ್ಟ ಗೊಂದಲಗಳಾಗುತ್ತವೆ. ಅದರ ಹೊರತಾಗಿಯೂ ಎಲ್ಲರೂ ಸಹಕಾರ ನೀಡಬೇಕು. ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಬೆಂಬಲಿಸಬೇಕು ಎಂದು ಸಲಹೆ ನೀಡಿದರು.
ಈ ಹಿಂದೆ ಕಾಂತರಾಜು ಆಯೋಗದ ಸಮೀಕ್ಷೆ ನಡೆಸುವಾಗಿನ ಅನುಭವಗಳನ್ನು ಆಧರಿಸಿ, ಈ ಬಾರಿ ಕ್ರಮ ಕೈಗೊಂಡಿದ್ದೇವೆ. ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗುವುದಿಲ್ಲ ಎಂದು ಹೇಳಿದರು.





