ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ.
ಜನರಿಗೆ ನಂಬಿಸಿ, ಉದ್ದುದ್ದ ಭಾಷಣ ಬಿಗಿಯುವ ಮೂಲಕ ಸಾರ್ವಜನಿಕರ ಕೈಗೆ ಚಂಬು ನೀಡಿದೆ ಎಂದು ಪ್ರಲ್ಹಾದ್ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.50 ರೂ ಗಳನ್ನು ಏರಿಕೆ ಮಾಡಿ ಶನಿವಾರ (ಜೂನ್.15) ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿರುವ ಬಿಜೆಪಿಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, “ಅಭಿವೃದ್ಧಿ ಕೇಳ್ಬೇಡಿ …. ತೊಗೊಳ್ರಪ್ಪ ಕೊಟ್ರು ಚೊಂಬು….. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್” ಎಂದು ಬರೆದುಕೊಂಡು ಸರ್ಕಾರಕ್ಕೆ ಕುಟುಕಿದ್ದಾರೆ.
ಇತ್ತ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟ್ವೀಟ್ ಮಾಡಿದ್ದು, “ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ. ಇನ್ನು ರಾಜ್ಯಾದ್ಯಂತ ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರು, ವಾಹನ ಸವಾರರು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ ಎಂದು ಸುದೀರ್ಘವಾಗಿ ಬರೆದುಕೊಂಡು ಕಾಂಗ್ರೆಸ್ ನಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.





