ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.28ರಂದು ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗಾಗಿ ಆಚರಿಸಲ್ಪಡುವ ಪ್ರಾಚೀನ ಮಠದ ಬಗ್ಗೆ ರಾಷ್ಟ್ರೀಯ ಗಮನ ಸೆಳೆಯುವ ಮಹತ್ವದ ಸಂದರ್ಭವಾಗಿದೆ. ಮೋದಿ ಅವರು, ‘ಲಕ್ಷ ಗೀತ ಪಠಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಒಗ್ಗಟ್ಟಿನಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ. ಮೋದಿ ಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮಠದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಭದ್ರತಾ ವ್ಯವಸ್ಥೆಗಳು ಮತ್ತು ಇತರ ಅಗತ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಗೀತಾ ಜಯಂತಿ ಅಂಗವಾಗಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿಯೂ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್ ಚಿಕ್ಕಮಾದು
ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇನ್ನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಕಳೆದ 2008ರಲ್ಲಿ ಸಿಎಂ ಮೋದಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಇದೀಗ ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲನೇ ಭೇಟಿಯಾಗಿದ್ದರೆ, ಒಟ್ಟಾರೆ 2ನೇ ಭೇಟಿಯಾಗಿದೆ. ವಿಶೇಷ ಅಂದರೆ ಅಂದೂ ಕೂಡ ಇದೇ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮೋದಿ ಅವರನ್ನು ಸ್ವಾಗತಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದರು.





