ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ.
ಅದರಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಇದೇ 23ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದೇ ತಿಂಗಳ 23ರಂದು ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ದೆಹಲಿಯ ಭೇಟಿಯ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ಮತ್ತು ಅರಣ್ಯ ಸಚಿವರನ್ನು ಭೇಟಿ ಮಾಡಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು, ಮಹಾದಾಯಿ ನದಿಗೆ ಅಡ್ಡಲಾಗಿ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪರಿಸರ ಇಲಾಖೆಯ ಅನುಮತಿ ಹಾಗೂ ಇತರ ನೆರವುಗಳ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ರಾಷ್ಟ್ರಮಟ್ಟದಲ್ಲಿ ನದಿ ಜೋಡಣೆಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವರು ನೀರು ಅಭಿವೃದ್ಧಿ ಸಂಸ್ಥೆಯ ಮಹತ್ವದ ಸಭೆ ಕರೆದಿದ್ದಾರೆ. ತಾವು ಅದರಲ್ಲಿಯೂ ಭಾಗವಹಿಸುವುದಾಗಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಕೆಲ ವಿಚಾರಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ. ಸಂಸದರ ಜೊತೆ ಕೇಂದ್ರ ಸಚಿವರನ್ನು ಭೇಟಿ ಮಾಡಬೇಕಿತ್ತು. ಆದರೆ ಸದ್ಯಕ್ಕೆ ಸಮಯ ಇಲ್ಲ. ಹಾಗಾಗಿ ತಾವೊಬ್ಬರೇ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಹೇಳಿದರು.



