ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದರು. ಪ್ರೌಢ ಶಾಲಾ ಸಹ ಶಿಕ್ಷಕರು ಬಹು ದಿನಗಳಿಂದ ಬಡ್ತಿಯ ಬಗ್ಗೆ ಆಗ್ರಹಿಸುತ್ತಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಸಚಿವರು, ಮೊದಲು ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ಧಪಡಿಸಿ, ನಂತರ ತಾತ್ಕಾಲಿಕ ಪಟ್ಟಿ ಪ್ರಕಟಿಸುತ್ತೇವೆ. ಆಕ್ಷೇಪಣೆಗಳ ಸಲ್ಲಿಕೆಯ ನಂತರ ಅವುಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದಾದ ಮೇಲೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಈಗಾಗಲೇ 2013ರ ಸಾಲಿನವರಿಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. 2024ರ ಮಾರ್ಚ್‌ನಲ್ಲಿ ಜೇಷ್ಠತಾ ಪಟ್ಟಿ ತಯಾರಿಕೆ ಸಂಬಂಧ ಮಾರ್ಗದರ್ಶನ ಕೋರಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ವಿವರಿಸಿದರು.
ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೀಡಿರುವ ಅಭಿಪ್ರಾಯದಂತೆ ನಾಲ್ಕು ಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಶಿಕ್ಷಕರ ಜೇಷ್ಠತಾ ಪಟ್ಟಿ ಪರಿಶೀಲಿಸಿ ನಂತರ ಅಂತಿಮ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.





