ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ. ಇದೆಲ್ಲಾ ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ರಾಜಭವನವನ್ನು ಬಳಸಿಕೊಂಡು ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ಹುನ್ನಾರ ನಡೆಸಿವೆ. ಆದರೆ, ರಾಜ್ಯದ ಜನತೆ, ಶಾಸಕರು ಅಹಿಂದ ನಾಯಕ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಸಿಎಂ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ, ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಹೋರಾಟ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.





