ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ.
ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಅವರಿದ್ದ ಪೀಠ, ಹೈಕೋರ್ಟ್ ಆದೇಶವಿದ್ದರೂ ಮುಷ್ಕರ ನಡೆಸಲಾಗಿದೆ. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು ಇಲ್ಲವಾದರೇ ನಾಳೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಸಾರಿಗೆ ಸಂಘಟನೆ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ಎಂದು ಎಚ್ಚರಿಸಿದರು.
ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ ಸಹಿಸಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಎಚ್ಚರಿಕೆ ನೀಡಿತು.
ನ್ಯಾಯಪೀಠದ ತರಾಟೆಗೆ ಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾಗಿ ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದ ನ್ಯಾಯಪೀಠವು ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಎರಡು ದಿನ ವಿಸ್ತರಣೆ ಮಾಡಿದ್ದು, ಮುಷ್ಕರ ಮುಂದುವರೆಸಿದರೆ ಎಸ್ಮಾ ಕಾಯ್ದೆಯಡಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದೆ. ನಂತರ ವಿಚಾರಣೆಯನ್ನ ಆಗಸ್ಟ್ 7ಕ್ಕೆ ಮುಂದೂಡಿಕೆ ಮಾಡಿದೆ.





