ಬೆಂಗಳೂರು: ನಮ್ಮ ರಾಜ್ಯ ಸರ್ಕಾರ ಕೇರಳಕ್ಕೆ ಉಪಕಾರಿಯಾಗಿ, ರಾಜ್ಯಕ್ಕೆ ಮಾರಿಯಾಗುವಂತಹ ಕಾರ್ಯ ನಿರ್ವಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ತಮ್ಮ ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನಮ್ಮ ರಾಜ್ಯದಲ್ಲಿಯೇ ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಈ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.