Mysore
19
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕಾಲ್ತುಳಿತ ಪ್ರಕರಣ | ಸರ್ಕಾರದ ವೈಫಲ್ಯ : ಅಶೋಕ

rcb celebration

ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್‌ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಐಪಿಎಲ್ ಪಟ್ಟ ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಕನ್ನಡಿಗರ ಜನಪ್ರಿಯ ಆರ್.ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ ಎಂದು ಹೇಳಿದ್ದಾರೆ.

ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ ಎಂದು ಟೀಕಿಸಿದ್ದಾರೆ.

ಚಾಂಪಿಯನ್ ಆರ್ ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ. ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು.
ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!