Mysore
19
broken clouds

Social Media

ಭಾನುವಾರ, 25 ಜನವರಿ 2026
Light
Dark

ಕಲಾವಿದರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಲ್ಲ: ಆರ್‌.ಅಶೋಕ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ(ಮಾರ್ಚ್.‌1) ನಡೆದ ಬೆಂಗಳೂರು ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಿನಿಮಾರಂಗದ ನಟ, ನಟಿಯರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯ ಮತ್ತು ಹಕ್ಕಿದೆ ಎಂದು ತಿರುಗೇಟು ನೀಡಿದ್ದಾರೆ.

ಕಲಾವಿದರು ನಿಮ್ಮ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.

Tags:
error: Content is protected !!