ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ವಿಧಾನಸೌಧದ ಬಜೆಟ್ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ 69ರ ಅಡಿಯಲ್ಲಿ ಭೋಜನ ವಿರಾಮದ ಬಳಿಕ ಮಾತನಾಡಿದ ಅವರು, ವಯಸ್ಸಿನ ಮಿತಿ ನಿರ್ಬಂಧ ಸಡಿಲಿಸಿ ಅರ್ಜಿ ಸಲ್ಲಿಸಿದ್ದ ಎಲ್ಲ 2.30 ಲಕ್ಷ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಗೂಗಲ್ ಭಾಷಾಂತರದ ಮೂಲಕ ಕನ್ನಡಕ್ಕೆ ಅಪಮಾನ ಮಾಡಿರುವ ಅಧಿಕಾರಿಗೆ ಭಾಷಾನೀತಿ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಬೇಜವಾಬ್ದಾರಿ ಹಾಗೂ ಹೊಣೆಗಾರಿಕೆ ಮರೆತು ಕಾರ್ಯ ನಿರ್ವಹಿಸಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ವಿಚಾರನೇಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಇನ್ನು ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಗೆ ಖರ್ಚಾಗಿರುವ 25 ಕೋಟಿ ರೂ.ಗಳಿಗೂ ಹೆಚ್ಚಾಗಿರುವ ಹಣದ ನಷ್ಟವನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು. ಪದೇ ಪದೇ ಪ್ರಶ್ನೆಪತ್ರಿಕೆ ಗೊಂದಲ ಆಗದಂತೆ ಎಚ್ಚರವಹಿಸಲು ಯುಪಿಎಸ್‌ಸಿ ಮಾದರಿ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು. ಅಲ್ಲದೇ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟರ್ ಹಾಗೂ ಎಇಇ ಹುದ್ದೆಗಳ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.





