ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್. ಅವರ ಸಲಹೆ ಮೇರೆಗೆ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ಅಧಿಕಾರ ನಡೆಸುತ್ತಿದ್ದು, ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಕೇಸ್‌ಗಳನ್ನು ಹಿಂಪಡೆಯಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜೊತೆಗೆ ಈ ಸರ್ಕಾರ ಆಡಳಿತ ನಡೆಸುವಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪವನ್ನು ಎದುರಿಸುತ್ತಿದೆ. ಈ ಮಧ್ಯೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿದ್ದಾರ್ಥ ವಿಹಾರ್ ಟ್ರಸ್ಟ್‌ನ ನಿವೇಶನಗಳನ್ನು ವಾಪಸ್ ಮಾಡಿದೆ ಎಂದು ರಾಜ್ಯ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಸಿಎಂ ಸಿದ್ದರಾಮಯ್ಯರ ಮಾತುಗಳನ್ನು ಸ್ವಪಕ್ಷದವರೇ ಕೇಳುತ್ತಿಲ್ಲ. ಹಾಗಾಗಿ ಸಿದ್ದರಾಮಯ್ಯ ಮುಸ್ಲಿಂಮರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.





