ಬೆಂಗಳೂರು: ರಾಜ್ಯದಲ್ಲಿ ಸಚಿವರ ಡಿನ್ನರ್ ಮೀಟಿಂಗ್ ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದರಿದ್ರ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರವಾಗಿರುವ ಸಚಿವರು, ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಒಳಗೊಳಗೆ ತಮ್ಮ ವರ್ಚಸ್ಸು ಉಳಿಸಿಕೊಳ್ಳಲು ಪರದಾಟ ನಡೆಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಸಚಿವರು ಕೂಡ ಅಧಿಕಾರಕ್ಕಾಗಿ ತೀವ್ರ ಸರ್ಕಸ್ ಮಾಡುತ್ತಿದ್ದಾರೆ. ಇದರಲ್ಲಿ ಕಾಲಹರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನಸಾಮಾನ್ಯರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ಸಚಿವರು ಕೂಡ ರೈತರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.