ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ? ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ! ಎಂದು ಹೇಳಿದ್ದಾರೆ.
ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸ್ವಾಭಿಮಾನಿ, ಅಲ್ಲ ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ರೈತರ ಕಷ್ಟ ಕೇಳಿ. ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬನ್ನಿ ಎಂದು ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗು ತಮ್ಮ ನಡುವೆ ಯಾವುದೇ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿಗೆ ಮತ್ತೊಮ್ಮೆ ತಣ್ಣೀರೆರಚಿದ್ದಾರೆ. ಉಪಮುಖ್ಯಮಂತ್ರಿಗಳೇ, ತಮ್ಮ ಕನಸು ಕನಸಾಗಿಯೇ ಉಳಿಯುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಈಗಲಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.