ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಈ ಹಿಂದೆ ಇಲಾಖೆಗೆ ಎಲ್ಲಾ ಪರೀಕ್ಷೆಗಳಿಗೂ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಬರೆಯಲು ಅವಕಾಶ ನೀಡಲಾಗಿತ್ತು. ಈ ಬೆನ್ನಲ್ಲೇ ಎಲ್ಲಾ ಕಡೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಹೀಗಾಗಿ ಈಗ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ ಎಂದರು.
ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಇಲಾಖೆಗೆ ಸೂಚನೆ ನೀಡಲಾಗಿದೆ. ಕನ್ನಡದಲ್ಲಿಯೂ ಸುತ್ತೋಲೆ ಹೊರಡಿಸಲು ತಿಳಿಸಿದ್ದೇನೆ. ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.
ಇದರಿಂದ ತೀವ್ರ ಸಂತೋಷಗೊಂಡಿರುವ ಕನ್ನಡಿಗರು ಸಚಿವ ವಿ.ಸೋಮಣ್ಣರ ಶ್ರಮಕ್ಕೆ ಜೈಕಾರ ಹಾಕಿದರು.





