ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇಲ್ಮೆ ಸುಳಿ ಗಾಳಿ ಉಂಟಾಗಿರುವ ಪರಿಣಾಮದಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಮತ್ತು ಬುಧವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಂಟಿಗ್ರೇಡ್ ತಲುಪಿದ್ದು, ಕಲಬುರಗಿಯಲ್ಲಿ 39 ಡಿಗ್ರಿ ಸೆಂಟಿಗ್ರೇಡ್‍ನಷ್ಟು ಇದೆ. ಕೊಪ್ಪಳ, ಹಾವೇರಿ, ಧಾರವಾಡ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲೂ 37 ಡಿಗ್ರಿ ಸೆಂಟಿಗ್ರೇಡ್‍ಗಿಂತ ಹೆಚ್ಚಿನ ಉಷ್ಣಾಂಶವಿರಲಿದೆ.
ಮಾರ್ಚ್ ತಿಂಗಳಲ್ಲಿ ಅಕಾಲಿಕ ಮಳೆಯಾಗುವುದು ವಾಡಿಕೆ. ಜನವರಿಯಿಂದ ಈ ತನಕ ರಾಜ್ಯದಲ್ಲಿ ಅಕಾಲಿಕ ಮಳೆಯಾಗಿಲ್ಲ. ಹೀಗಾಗಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಮಾರ್ಚ್-ಏಪ್ರಿಲ್, ಮೇ ತಿಂಗಳಿನಲ್ಲಿ ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.