Mysore
20
overcast clouds
Light
Dark

ಇನ್ನು ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ !

ಬೆಂಗಳೂರು :  ಇಂದಿನಿಂದ 2 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಇದನ್ನ ಹೊರತುಪಡಿಸಿದರೆ ನಗರದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಜನರು ಮನೆಯಿಂದ ಹೊರಗಡೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ.

ಇದರ ನಡುವೆಯೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಕೊಡಗು, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆರಾಯ ಕೃಪೆ ತೋರಲಿದ್ದಾನೆ ಎಂದು ತಿಳಿಸಿದೆ. ಹಾಗೆಯೇ ಮುಂದಿನ ಕೆಲವೇ ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ನೀರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಮಾಡಿದೆ.

ಇನ್ನು ಇಂದು (ಮಾರ್ಚ್‌ 23) ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆ ಸುರಿಯಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಮತ್ತೊಂದೆಡೆ ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.ರಾಜ್ಯ ರಾಜಧಾನು ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.