ರಾಮನಗರ: ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಬಗ್ಗೆ ತೀವ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬಿದ್ದು ಹೋಗುತ್ತೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ಮಾತು ಮಾತಿಗೂ ಹೇಳಿಕೆ ನೀಡುತ್ತಾ ಬಂದಿದ್ದಾರೆ.
ನಮ್ಮ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ. ನಮ್ಮ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನಿಶ್ಚಿತ ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸರ್ಕಾರ ಹೊಡೆದು ಹಾಕುತ್ತೇವೆ ಎಂದು ಹೇಳ್ತಾರೆ. ನಮ್ಮ ಸರ್ಕಾರ ಹೊಡೆಯಲು ಅದೇನು ಮಡಿಕೆನಾ ಎಂದು ಪ್ರಶ್ನೆ ಮಾಡಿದರು.
ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಎಲ್ಲರ ಬದುಕನ್ನು ಬದಲಾಯಿಸಿದೆ. ನಿಮ್ಮ ಬದುಕು ನಮ್ಮ ಉಸಿರು ಎಂದು ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ಇಂದು ರಾಮನಗರದಲ್ಲಿ ಜನಾಂದೋಲನ ಕಾರ್ಯಕ್ರಮ ನಡೆಸಿದ ಕಾಂಗ್ರೆಸ್ ನಾಯಕರು, ಭಾಷಣದುದ್ದಕ್ಕೂ ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು.





