ಬೆಂಗಳೂರು: ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್ ಶರೀಫ್ ಎಂಬಾತನನ್ನು ಇಂದು ( ಮಾರ್ಚ್ 28 ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಮೂರು ರಾಜ್ಯಗಳಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಬಾಂಬ್ ಇರಿಸಿದ್ದ ಎನ್ನಲಾದ ಮುಸವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಈತ ಸಹಕಾರ ನೀಡಿದ್ದ ಎಂದು ಎನ್‌ಐಎ ಮೂಲಗಳು ಹೇಳಿವೆ.
18 ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಮುಜಾಮಿಲ್ ಶರೀಫ್, ಪ್ರಮುಖ ಶಂಕಿತರಿಗೆ ಸಹಾಯ ಮಾಡಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಈತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.





