Mysore
26
scattered clouds
Light
Dark

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅತ್ಯಾಚಾರ ಪ್ರಕರಣ ಹೆಚ್ಚಳ: ಆರ್.‌ಆಶೋಕ್‌ ಆರೋಪ

ಬೆಂಗಳೂರು: ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದ್ದು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದರು.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ. ಕಾಂಗ್ರೆಸ್‌ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂದವರು ಇದನ್ನ ಮಾಡುತ್ತಿದ್ದಾರೆ. ಕೇರಳದಲ್ಲಿ ಲವ್‌ ಜಿಹಾದ್‌ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದರು.

ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಫೋಟೋ ತೆಗೆಯಲು ಮೊಬೈಲ್‌ ಎಲ್ಲಿಂದ ಬಂತು? ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟು, ಕಾಫಿ, ಮಾದಕ ವಸ್ತು ನೀಡಲಾಗುತ್ತಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಕುಸಿದುಹೋಗಿದೆ. ಅತ್ಯಾಚಾರ, ಕೊಲೆ ಹೆಚ್ಚಿದೆ. ಸರ್ಕಾರ ಉಳಿಯುತ್ತೋ, ಇರುತ್ತೋ ಎಂದೇ ಶಾಸಕರು, ಸಚಿವರು ಚಿಂತೆ ಮಾಡುತ್ತಿದ್ದಾರೆ. ಜೈಲಿನಲ್ಲಾದ ಈ ಘಟನೆಗೆ ಸರ್ಕಾರ ಸರಿಯಾದ ಉತ್ತರ ನೀಡಬೇಕು. ತನಿಖೆ ಮಾಡುತ್ತೇವೆ ಎಂದರೆ ಏನೂ ಉಪಯೋಗವಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆ ಸಂಬಂಧ ಬಿಜೆಪಿ-ಜೆಡಿಎಸ್‌ನಿಂದ ಕಾನೂನು ಹೋರಾಟ ಮಾಡಲು ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟವೂ ಮುಂದುವರಿಯಲಿದೆ ಎಂದು ತಿಳಿಸಿದರು.