ಮಂಗಳೂರು: ಕರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಹೀಗಿರುವಾಗ ಇಂದಿನಿಂದ(ಜು.8) ಮತ್ತೆ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ದಾಖಲೆಯ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂದಿನ 24 ಗಂಟೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಇನ್ನು ಅದೇ ಜಿಲ್ಲೆಗಳಿಗೆ ಜುಲೈ 9 ಮತ್ತು 12ರಂದು ಆರೆಂಜ್ ಅಲರ್ಟ್, ಜುಲೈ 10 ಮತ್ತು 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಮೇಲೆ ಅನೇಕ ಸ್ಥಳಗಳಲ್ಲಿ ಗಾಳಿಯ ವೇಗ ತಲುಪುವ ಸಾಧ್ಯತೆಯಿರುವ ಕಾರಣದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಬಳ್ಳಾರಿ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ. ಜು.13ರ ನಂತರ ಮಳೆಯ ಪ್ರಮಾಣ ತಗ್ಗಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.





