ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳುವುದರಿಂದ ಮಕ್ಕಳ ಕಲಿಕೆಗೆ ಯಾವುದೇ ತೊಂದರೆಯಾಗುವುದಿಲ್ಲ. ದಸರಾ ರಜೆಯ ಸಂದರ್ಭದ 15 ದಿನಗಳಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದರು.
ಈ ಅವಧಿಯ ರಜೆಯನ್ನು ಶಿಕ್ಷಕರಿಗೆ ಬೇರೆ ರೀತಿ ಕಲ್ಪಿಸುವ ಬಗ್ಗೆ ಚಿಂತನೆಗಳಿವೆ. ಸಮೀಕ್ಷೆಯಲ್ಲಿ ಭಾಗವಹಿಸುವವರಿಗೆ ಸರ್ಕಾರ ಹೆಚ್ಚುವರಿ ಗೌರವ ಧನ ನೀಡಲಿದೆ. ಶಿಕ್ಷಕರ ಸಂಘದ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದೆ. ಸಮೀಕ್ಷೆಯನ್ನು ಉತ್ತಮ ರೀತಿಯಲ್ಲಿ ನಡೆಸುವಂತೆ ಮನವಿ ಮಾಡಿದ್ದೇನೆ ಎಂದರು.
ಶಿಕ್ಷಕರನ್ನು ಸಮೀಕ್ಷೆಗೆ ಬಳಸಬಾರದು ಎಂಬ ಚರ್ಚೆಗಳಿವೆ. ಆದರೆ ಇದಕ್ಕೆ ಪರ್ಯಾಯವಾಗಿ ಬೇರೆ ವ್ಯವಸ್ಥೆಗಳು ಈವರೆಗೂ ಸೃಷ್ಟಿಯಾಗಿಲ್ಲ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಹಾಗೂ ಜನಗಣತಿಗೆ ಶಿಕ್ಷಕರನ್ನಲ್ಲದೇ ಬೇರೆ ಯಾರನ್ನು ಬಳಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.





