Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಚಿಂತನೆ: ಡಿ.ಕೆ ಶಿವಕುಮಾರ್‌

ರಾಮನಗರ : ʼಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆʼ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼ ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತುʼʼ ಎಂದು ವಿವರಿಸಿದ್ದಾರೆ.

ʼʼಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡʼʼ ಎಂದು ಅವರು ತಿಳಿಸಿದ್ದಾರೆ.

ʼಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆʼ ಎಂದು ಡಿ.ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ