ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿರುವ ಫೋಟೋವೊಂದು ವೈರಲ್ ಆಗಿತ್ತು. ಇದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿದ್ದವು.
ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ 9 ಮಂದಿ ಜೈಲು ಸಿಬ್ಬಂದಿಯನ್ನು ಅಮಾನತುಗೊಳಿಸಿತ್ತು.
ಇದಲ್ಲದೇ ನಟ ದರ್ಶನ್‌ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ಕೂಡ ನಡೆಸಿತ್ತು. ಇದೀಗ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಉಳಿದ ಆರೋಪಿಗಳನ್ನು ಸಹ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ಸೂಚಿಸಿದೆ. ಪವನ್, ರಾಘವೇಂದ್ರ, ನಂದೀಶ್ ಈ ಮೂವರು ಮೈಸೂರು ಜೈಲಿಗೆ ಶಿಫ್ಟ್ ಆಗಲಿದ್ದು, ಜಗದೀಶ್ ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ಧನರಾಜ್ ಧಾರವಾಡ ಜೈಲಿಗೆ ಹೋಗಲಿದ್ದು, ವಿನಯ್ ವಿಜಯಪುರ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ನಾಗರಾಜ್ ಗುಲ್ಬರ್ಗಾ ಜೈಲಿಗೆ ಶಿಫ್ಟ್ ಆಗಲಿದ್ದು, ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ಪ್ರದೋಷ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದು, ಉಳಿದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಗ್ಯಾಂಗ್‌ನ ಆರೋಪಿಗಳೆಲ್ಲಾ ಒಬ್ಬೊಬ್ಬರು ಒಂದೊಂದು ಕಡೆ ದಿಕ್ಕಾಪಾಲಾಗಿದ್ದಾರೆ.