ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಲು ಒಪ್ಪಿಗೆ ಸೂಚಿಸಿದೆ.
ಈ ವಿಚಾರವಾಗಿ ಇಂದು(ಜನವರಿ.24) ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವೂ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನುಳಿದವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ಈ ಆರೋಪಿಗಳ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ ಎಂದು ಆದೇಶ ಹೊರಡಿಸಿದೆ.
ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ಬೆಂಗಳೂರು ಪೊಲೀಸರ ಪರವಾಗಿ ಹಿರಿಯ ವಕೀಲರಾದ ಸಿದ್ದಾರ್ಥ್ ಲೂಥ್ರಾ ಮತ್ತು ಅನಿಲ್ ಸಿ.ನಿಶಾನಿ ಅವರು ವಾದ ಮಂಡಿಸಿದ್ದು, ಹೈಕೋರ್ಟ್‌ನ ಜಾಮೀನು ಆದೇಶವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ವಾದ ಮಂಡಿಸಿದರು.