ದಾವಣಗೆರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸಹಾಯಕನ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಗುತ್ತಿಗೆದಾರ ಡೆತ್‌ನೋಟ್ ಬರೆದಿಟ್ಟಿದ್ದಾರೆ.
ಹಲವು ಶಾಸಕರು ಬೆದರಿಸಿದ ಮಾಹಿತಿ ಕೂಡ ಇದರಲ್ಲಿ ಇದೆ. ಆದರೂ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದು ಅರಾಜಕತೆಯ ನಿದರ್ಶನ ಎಂದು ಕಿಡಿಕಾರಿದರು.
ಇನ್ನು ಸಿಎಂ ಸಿದ್ದರಾಮಮಯ್ಯ ಅವರ ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಸೇಡಿನ ರಾಜಕಾರಣ ಹೆಚ್ಚಾಗಿದೆ. ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸುವುದು ಹಾಗೂ ವಿಶೇಷ ತನಿಖೆ ತಂಡ ರಚಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಪ್ರಚೋದನೆಯಿಂದ ಬೆಳಗಾವಿಯಲ್ಲಿ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡರು.
ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಈವರೆಗೂ ಬಂಧಿಸಿಲ್ಲ. ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನ್ಕಕೆ ಹೆಚ್ಚಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.





