ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಾಗೂ ಮಾಜಿ ಸಚಿವ
ಭೈರತಿ ಬಸವರಾಜ್ ಅವರ ಮೇಲೆ ಬಲವಂತದ ಕಾನೂನು ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.
ಮುಂದುವರೆದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠವು, ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ತನಿಖಾಧಿಕಾರಿಗಳಿಗೆ ಈ ಆದೇಶ ನೀಡಿತು. ಜೊತೆಗೆ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಭೈರತಿ ಬಸವರಾಜು ಅವರಿಗೆ ನಿರ್ದೇಶನ ನೀಡಿದೆ.
ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ಬಿಕ್ಲು ಶಿವ ಕೊಲೆ ಕೇಸ್‍ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಜುಲೈ 15, 2025ರಂದು ಬೆಂಗಳೂರಿನ ಹಲಸೂರು ಕೆರೆ ಸಮೀಪದಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಈ ಘಟನೆಗೆ ಸಂಬಂಧಿಸಿದಂತೆ, ಮೃತನ ತಾಯಿ ವಿಜಯಲಕ್ಷ್ಮೀ ದೂರು ದಾಖಲಿಸಿದ್ದರು.
ಜುಲೈ.18ರಂದು ನೀಡಿದ್ದ ಮಧ್ಯಂತರ ಆದೇಶದಂತೆ, ಬೈರತಿ ಜುಲೈ 19ರಂದು ಭಾರತಿನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಎರಡನೇ ಬಾರಿಯೂ ಪೊಲೀಸರಿಂದ ನೋಟಿಸ್ ಪಡೆದು, ಜುಲೈ.23ರಂದು ಮತ್ತೆ ವಿಚಾರಣೆಗೆ ಒಳಗಾಗಿದ್ದರು. ಈ ಎರಡೂ ಸಂದರ್ಭಗಳಲ್ಲಿ, ಶಾಸಕರು ತನಿಖಾಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿ, ಸಹಕಾರ ನೀಡಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠವು ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ತನಿಖಾಧಿಕಾರಿಗಳಿಗೆ ಸೂಚಿಸಿದೆ.




