ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಆಚರಿಸಲಾಗುತ್ತಿದ್ದು, ನಾಳೆ(ಡಿ.11) ಅಧಿಕೃತವಾಗಿ ಸರ್ಕಾರಿ ರಜೆಯನ್ನು ಘೋಷಿಸಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಎಸ್.ಎಂ.ಕೃಷ್ಣ(93) ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಿಗ್ಗೆ ಸುಮಾರು 2.30 ಗಂಟೆಗೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ(ಡಿ.11) ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಸದಾಶಿವನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ನಿವಾಸದಲ್ಲಿ ಬುಧವಾರ(ಡಿ.11) ಬೆಳಿಗ್ಗೆ 8 ಗಂಟೆಯವರೆಗೆ ಮೃತರ ಅಂತಿಮ ದರ್ಶನ ನಡೆಯಲಿದೆ. ಬಳಿಕ ಬೆಳಿಗ್ಗೆ 10.30 ಗಂಟೆಯಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.