ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ರಾಜ್ಯದ ಹಲವು ರಾಜಕಾರಣಿಗಳು ಸಂತಾಪವನ್ನು ಸೂಚಿಸಿದ್ದಾರೆ.
ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ಪ್ರತಿಕ್ರಿಯೆ ನೀಡಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಮಹತ್ವಪೂರ್ಣ ಕಾರ್ಯಗಳನ್ನು ಕೈಗೊಂಡು ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಧನ ಈ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಹೀಗಾಗಿ ಅವರ ಕುಟುಂಬ ವರ್ಗಕ್ಕೆ ಅತೀವ ಸಂತಾಪಗಳು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಎಸ್‌ಎಂಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ಅವರು ರಾಜ್ಯದ ಸಿಎಂ ಆಗಿದ್ದಾಗ ವಿಶೇಷವಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಎಸ್‌ಎಂಕೆ
ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಎಸ್.ಎಂ.ಕೃಷ್ಣ ಅವರು ರಾಜ್ಯದ ವಿಧಾನಸಭಾಧ್ಯಕ್ಷರಾಗಿ, ಮುಖ್ಯಮಂತ್ರಿಗಳಾಗಿ, ಉಪ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಉತ್ತಮ ಕೊಡುಗೆ ನೀಡಿದ್ದ ಹಿರಿಯರಾಗಿದ್ದಾರೆ. ಆದರೆ ಇಂದು ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು ಎಂದು ತಿಳಿಸಿದ್ದಾರೆ.
ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರು ಕರ್ನಾಟಕದ ಪ್ರಗತಿಗೆ ಸಾಕಷ್ಟು ಕೋಡುಗೆ ನೀಡಿದ್ದಾರೆ. ಅಲ್ಲದೇ ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಆದರೆ ಇಂದು ಅವರು ನಮ್ಮನ್ನೆಲ್ಲಾ ಬಿಟ್ಟು ಅಗಲಿದ್ದಾರೆ. ಹೀಗಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಪೋಸ್ಟ್ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಆರ್.ಅಶೊಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸಜ್ಜನಿಕೆ ಮತ್ತು ಘನತೆಯ ನಡವಳಿಕೆಯ ಸುಸಂಸ್ಕೃತ ಮುತ್ಸದ್ದಿ ರಾಜಕಾರಣಿ, ಪ್ರಬುದ್ಧ ಆಡಳಿತಗಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅಪಾರ ನೋವು ತಂದಿದೆ ಎಂದಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆಗಳನ್ನು ಅಲಂಕರಿಸಿ ಇತಿಹಾಸದಲ್ಲಿ ತಮ್ಮ ಶಾಶ್ವತ ಹೆಜ್ಜೆ ಗುರುತು ಮೂಡಿಸಿರುವ ಎಸ್.ಎಂ ಕೃಷ್ಣರವರು ಕನ್ನಡಿಗರ ಹೆಮ್ಮೆ. ಬೆಂಗಳೂರು ಸಿಲಿಕಾನ್ ಸಿಟಿ ಎನಿಸಿಕೊಳ್ಳಲು ಅವರು ಕೊಟ್ಟ ಕೊಡುಗೆ ಬಹಳವಾಗಿದೆ. ಆದರೆ ಇಂದು ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಭಗವಂತ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಎಸ್.ಎಂ.ಕೃಷ್ಣ ಅವರ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪವನ್ನು ಸೂಚಿಸಿದ್ದು, ಎಸ್.ಎಂ.ಕೃಷ್ಣ ಅವರು ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಪ್ರಶಸ್ತಿಯನ್ನು ಪಡೆದವರು. ಆದರೆ ಇಂದು ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಸ್‌ಎಂಕೆ ಅವರು ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ಆದರೆ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯೂ ನನಗೆ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ರೀತಿ ನೋವು ಉಂಟು ಮಾಡಿದೆ. ಎಸ್.ಎಂ.ಕೃಷ್ಣ ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ನಮ್ಮನ್ನು ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…