ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ನಮ್ಮ ಸಿಐಡಿ ತುಂಬಾ ಸಮರ್ಥವಾಗಿದೆ. ಆದ್ದರಿಂದ ಸಚಿನ್ ಪಾಂಚಾಳ ಆತ್ಮಹತ್ಯೆ ಕೇಸನ್ನು ಸಿಐಡಿಗೆ ವಹಿಸಲಾಗುವುದು ಎಂದರು.
ಇನ್ನು ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವ ಮಾತೇ ಇಲ್ಲ. ಸಿಐಡಿ ಕೂಡ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಚಿನ್ ಆತ್ಮಹತ್ಯೆ ಕೇಸ್‌ಗೂ ಸಚಿವ ಪ್ರಿಯಾಂಕ್ ಖರ್ಗೆಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.





