ಕಲಬುರ್ಗಿ: ಕಳೆದ ಒಂದು ವರ್ಷದಿಂದಲೂ ದಲಿತ ಮುಖ್ಯಮಂತ್ರಿ ಚರ್ಚೆ ಸ್ಥಗಿತಗೊಂಡಿವೆ. ಇನ್ನು ಮುಂದಿನ ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಅದರ ಬಗ್ಗೆ ಮತ್ತೆ ಮತ್ತೆ ಚರ್ಚೆ ಮಾಡುವ ಅಗತ್ಯವಿಲ್ಲ. ಹೈಕಮಾಂಡ್ ಮತ್ತು ಮುಖ್ಯಮಂತ್ರಿಯವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.
ಇನ್ನು ನವೆಂಬರ್ ವೇಳೆಗೆ ಸಿದ್ದರಾಮಯ್ಯನವರು ಬದಲಾವಣೆಯಾಗುತ್ತಾರೆ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಬೇರೆ ಪಕ್ಷದಲ್ಲಿದ್ದಾರೆ. ಅವರು ಹೇಳುವುದಕ್ಕೆಲ್ಲಾ ನಾವು ಪ್ರತಿಕ್ರಿಯಿಸಲು ಸಾಧ್ಯ ಇಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ಈ ರೀತಿ ಮಾತನಾಡಿದರೆ ನಾವು ಪ್ರತಿಕ್ರಿಯಿಸಬಹುದು ಎಂದು ಹೇಳಿದರು.





