ಬೆಂಗಳೂರು: ಮುಖ್ಯಮಂತ್ರಿ ಆಯ್ಕೆಯ ವೇಳೆ ಮತ ಚಲಾವಣೆಯಾಗಿದೆ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ತಮಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ಹೇಳಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳವರೆಗೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಸ್ಪಷ್ಟ ಸಂದೇಶ ನೀಡಿದ್ದಾರೆ. ಈಗಲಾದರೂ ನಾಯಕತ್ವ ಬದಲಾವಣೆಯ ಚರ್ಚೆಗಳು ನಿಲ್ಲಬೇಕು. ಶೇ.10ರಷ್ಟು ಜನ ಈ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೂ ನೇರವಾದ ಸಂದೇಶ ರವಾನೆಯಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಹೇಳಿದ ಮೇಲೆ ಎಲ್ಲದಕ್ಕೂ ಇತಿಶ್ರೀ ಹಾಡಿದಂತೆ. 5 ವರ್ಷ ಅವಧಿ ಪೂರೈಸುವುದು ಹೊಸ ವಿಚಾರವೇನಲ್ಲ. ಹಲವು ಬಾರಿ ಹೇಳಿದ್ದಾರೆ. ನಾನು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ. ಆದರೆ ಸಿದ್ದರಾಮಯ್ಯ ಅವರಿಗೆ ಪ್ರತಿಸ್ಪರ್ಧಿಯಲ್ಲ ಎಂದು ಸ್ಪಷ್ಟಪಡಿಸಿದರು.





