ಬೆಳಗಾವಿ: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವ ಧನ ಕನಿಷ್ಠ ವೇತನಕ್ಕಿಂತ ಕಡಿಮೆ ಇದೆ ಎಂದು ಶಾಸಕ ಸಿ.ಎನ್.ಅಶ್ವಥ್ ನಾರಾಯಣ ವಿಧಾನಸಭೆಯಲ್ಲಿ ಆರೋಪಿಸಿದರು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ 10 ಸಾವಿರ ರೂ. ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ 10,500 ರೂ. ಮತ್ತು ಪದವೀಪೂರ್ವ ಕಾಲೇಜಿನ ಉಪನ್ಯಾಸಕರಿಗೆ 12 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಇದು ಕನಿಷ್ಟ ವೇತನಕ್ಕಿಂತ ಕಡಿಮೆ ಇದೆ. ಹೀಗಾಗಿ 20 ಸಾವಿರ ರೂ. ಗೌರವಧನ ಕೊಡಬೇಕೆಂದು ಒತ್ತಾಯಿಸಿದರು.
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನದ ಪ್ರಸ್ತಾವನೆ ಆರ್ಥಿಕ ಇಲಾಖೆಯಿಂದ ತಿರಸ್ಕೃತಗೊಂಡಿದೆ. ಹೀಗಾಗಿ ಈ ಸಂಬಂಧ ಮುಖ್ಯಮಂತ್ರಿಯವರು ಸದನಕ್ಕೆ ಉತ್ತರಕೊಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿಯ ಇತರ ಶಾಸಕರು ಕೂಡ ದನಿಗೂಡಿಸಿದರು.





