ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಂ ಸ್ಟೇಗಳಲ್ಲಿ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಹೋಂಸ್ಟೇ ಮಾಲೀಕರು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೋಂ ಸ್ಟೇಗಳು ನೋಂದಣಿಯಾಗಿರಬೇಕು. ವಿವಿಧ ಸಂಸ್ಥೆಗಳಿಂದ ಅಗತ್ಯವಿರುವ ಪರವಾನಗಿಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೊಡಗಿನಲ್ಲಿರುವ ಹೋಂಸ್ಟೆನಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ. ದೇಶದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ ಎಂದು ಪ್ರಶ್ನಿಸಿದರು.
ಘಟನೆಯ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿರಬಹುದು. ಪೊಲೀಸರು ಅದನ್ನೆಲ್ಲಾ ಗಮನಿಸುತ್ತಾರೆ. ಲೈಂಗಿಕ ದೌರ್ಜನ್ಯ ಎಸಗಿದವರು ಜಾರ್ಖಂಡ್‌ನವರು ಎಂದು ಹೇಳಲಾಗಿದೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.





