ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಯಾವ ಯಾವ ಸರ್ಕಾರ ಇದ್ದಾಗ ಏನೇನು ತೀರ್ಮಾನ ಆಗಿದೆ ಎಂಬ ಬಗ್ಗೆ ಇಂದು ಚರ್ಚೆ ನಡೆಸಿದ್ದೇವೆ. ರಾಜ್ಯಪಾಲರು ಇಷ್ಟು ಬೇಗ ನೋಟಿಸ್ ಕೊಟ್ಟಿದ್ದಾರೆ ಎಂದರೇ ಏನು ಅರ್ಥ ಎಂದು ಪ್ರಶ್ನಿಸಿದರು.
ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ಕೊಟ್ಟಿರುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿದ್ದೇವೆ. ರಾಜ್ಯಪಾಲರಿಗೆ ಸಲಹೆ ನೀಡಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಿಎಂಗೆ ರಾಜ್ಯಪಾಲರು ತಮ್ಮ ನೋಟಿಸ್ ವಾಪಸ್ ಪಡೆಯಬೇಕು ಎಂದು ನಿರ್ಣಯವಾಗಿದೆ ಎಂದು ಇಂದಿನ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿ ನೀಡಿದರು.