ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಸಿದ್ದರಾಮಯ್ಯ ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡಿ ದೊಡ್ಡ ದೊಡ್ಡ ಸಮಾವೇಶ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಹಾಗೂ ಸಚಿವರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವುಗಳಾದರೂ ಬರುವಷ್ಟು ಸಮಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿಗಳು ಮುಡಾದಲ್ಲಿ ಸುಮಾರು 700 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಡಿ ಹಾಗೂ ಸಿಬಿಐ ಭೀತಿ ಶುರುವಾಗಿದೆ. ಅದಕ್ಕೆ ಸಿದ್ದರಾಮಯ್ಯರು ಶಕ್ತಿ ಪ್ರದರ್ಶನ ಮತ್ತು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಈ ಸಮಾವೇಶದ ಮೂಲಕ ಇಡಿ ಅಥವಾ ಸಿಬಿಐ ಅಧಿಕಾರಿಗಳಿಗೆ ನನ್ನ ಹಿಂದೆ ಇಷ್ಟೊಂದು ಜನಶಕ್ತಿಯ ಬೆಂಬಲವಿದೆ ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.