ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಭಾನುವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ನಂತರ ಭುಗತಹಳ್ಳಿಯ ಫಾರಂಹೌಸ್ ಒಂದರಲ್ಲಿ ಏರ್ಪಡಿಸಲಾಗಿದ್ದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ವರ್ತುಲ ರಸ್ತೆಯಲ್ಲಿ ಇರುವ ಖಾಸಗಿ ಹೋಟೆಲ್ ಒಂದರಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡರು. ಸಂಜೆ ೪ ಗಂಟೆ ವೇಳೆಗೆ ಅವರು ಬೆಂಗಳೂರಿಗೆ ವಾಪಸ್ಸಾದರು.
ಇದನ್ನು ಓದಿ: ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ
ಮಾಧ್ಯಮಗಳೊಂದಿಗೆ ಮುನಿಸು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಮಧ್ಯಾಹ್ನ ೧೨ ಗಂಟೆಯಿಂದಲೇ ವಿಮಾನ ನಿಲ್ದಾಣದಲ್ಲಿ ಕಾದಿದ್ದರು.
೨.೩೦ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ ಅವರು ಮಾಧ್ಯಮದವರನ್ನು ಕಂಡೊಡನೆ ನೋ ಬೈಟ್ ಎಂದು ಹೇಳುತ್ತಾ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ಕಾರನ್ನು ಏರಿ ಬೀಗರೂಟ ಕಾರ್ಯಕ್ರಮಕ್ಕೆ ತೆರಳಿದರು.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್,ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮುಂತಾದವರು ಹಾಜರಿದ್ದರು.





