ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ಸಿಎಂ ಸಲಹೆ ನೀಡಿದರು.
ಜತೆಗೆ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಮಾತನಾಡಿ, ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಂಬೇಡ್ಕರ್ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.